ಇತ್ತೀಚಿನ ದಿನಗಳಲ್ಲಿ ರಾಜ್ಯದ ಹವಾಮಾನದಲ್ಲಿ ನಿರಂತರ ಬದಲಾವಣೆಗಳು ಕಂಡುಬರುತ್ತಿವೆ. ಕೆಲವೆಡೆ ಚಳಿ ಹೆಚ್ಚಾಗಿದ್ದರೆ, ಕೆಲವು ಪ್ರದೇಶಗಳಲ್ಲಿ ಮೋಡ ಮುಸುಕಿದ ವಾತಾವರಣ ಹಾಗೂ ತುಂತುರು ಮಳೆಯ ಸಾಧ್ಯತೆ ಇದೆ. ಇನ್ನೂ ಹಲವೆಡೆ ಒಣಹವೆಯ ವಾತಾವರಣ ಮುಂದುವರಿದಿದ್ದು, ಬೆಳಗ್ಗೆ ಮತ್ತು ರಾತ್ರಿ ಸಮಯದಲ್ಲಿ ಚಳಿ ಹೆಚ್ಚು ಅನುಭವವಾಗುತ್ತಿದೆ. ಈ ಬದಲಾವಣೆಯ ಹಿನ್ನಲೆಯಲ್ಲಿ ಜನರು ತಮ್ಮ ದಿನನಿತ್ಯದ ಚಟುವಟಿಕೆಗಳಲ್ಲಿ ಎಚ್ಚರ ವಹಿಸುವ ಅಗತ್ಯವಿದೆ.

ಬೆಂಗಳೂರಿನಲ್ಲಿ ತೀವ್ರ ಚಳಿ:
ಕಳೆದ ಮೂರು-ನಾಲ್ಕು ದಿನಗಳಿಂದ ಬೆಂಗಳೂರು ತೀವ್ರ ಚಳಿಯಿಂದ ಕಂಪಿಸುತ್ತಿದೆ. ಇಂದು ಕೂಡಾ ಇಡೀ ದಿನ ಮೋಡ ಮುಸುಕಿದ ವಾತಾವರಣದ ಜೊತೆಗೆ ಚಳಿ ಹೆಚ್ಚಾಗಿ ಕಂಡುಬಂದಿದೆ. ಶೀತಗಾಳಿಯ ಪರಿಣಾಮ ಬೆಳಗ್ಗೆ, ಮಧ್ಯಾಹ್ನ, ಸಂಜೆ ಹಾಗೂ ರಾತ್ರಿ ಎಲ್ಲ ಸಮಯದಲ್ಲೂ ಚಳಿ ಅನುಭವವಾಗುತ್ತಿದ್ದು, ಜನರು ಮನೆಯಿಂದ ಹೊರಬರಲು ಹಿಂಜರಿಯುತ್ತಿರುವುದು ಕಂಡುಬಂದಿದೆ.
ಚಳಿಯ ನಡುವೆಯೂ ವಾಕಿಂಗ್:
ಉದ್ಯಾನನಗರಿ ಬೆಂಗಳೂರಿನ ಲಾಲ್‌ಬಾಗ್ ಸೇರಿದಂತೆ ವಿವಿಧ ಉದ್ಯಾನಗಳಲ್ಲಿ ಚಳಿಯ ನಡುವೆಯೂ ಜನರು ವಾಕ್ ಮಾಡುತ್ತಿರುವ ದೃಶ್ಯಗಳು ಕಂಡುಬಂದವು. ಯುವಕರು, ಗೃಹಿಣಿಯರು ಹಾಗೂ ವಯೋವೃದ್ಧರು ಸ್ವೆಟರ್, ಜಾಕೆಟ್ ಮತ್ತು ಕ್ಯಾಪ್ ಧರಿಸಿ ಆರೋಗ್ಯ ಕಾಪಾಡಿಕೊಳ್ಳಲು ಬೆಳಿಗ್ಗೆ ಮತ್ತು ಸಂಜೆ ಸಮಯದಲ್ಲಿ ವಾಕ್ ಮಾಡಿದ್ದಾರೆ. ಚಳಿ ಇದ್ದರೂ ಜನರು ತಮ್ಮ ದಿನಚರಿಯನ್ನು ಮುಂದುವರಿಸಿದ್ದಾರೆ.
ಮುಂದಿನ ನಾಲ್ಕು ದಿನಗಳ ಮುನ್ಸೂಚನೆ:
ಇಂದು ಬೆಂಗಳೂರಿನಲ್ಲಿ ಕನಿಷ್ಠ ತಾಪಮಾನ 16 ಡಿಗ್ರಿ ಸೆಲ್ಸಿಯಸ್ ದಾಖಲಾಗಿದ್ದು, ನಿನ್ನೆ ಇದು 14 ಡಿಗ್ರಿಗೆ ಇಳಿಕೆಯಾಗಿತ್ತು. ಹವಾಮಾನ ಇಲಾಖೆಯ ಪ್ರಕಾರ ಮುಂದಿನ ನಾಲ್ಕು ದಿನಗಳ ಕಾಲ ಇದೇ ರೀತಿಯ ಚಳಿ ಮುಂದುವರಿಯುವ ಸಾಧ್ಯತೆ ಇದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಡಿಪ್ರೆಶನ್‌ನ ಪರಿಣಾಮ ಶೀತಗಾಳಿ ಹೆಚ್ಚಾಗಿ ಚಳಿ ತೀವ್ರವಾಗಿದೆ.
ದಕ್ಷಿಣ ಒಳನಾಡಿನ ಕೆಲವೆಡೆ ತುಂತುರು ಮಳೆಯ ಸಾಧ್ಯತೆ:
ರಾಜ್ಯದ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ತುಂತುರು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ತುಮಕೂರು, ಚಿಕ್ಕಬಳ್ಳಾಪುರ, ರಾಮನಗರ, ಮಂಡ್ಯ ಮತ್ತು ಮೈಸೂರು ಜಿಲ್ಲೆಗಳ ಕೆಲ ಭಾಗಗಳಲ್ಲಿ ಲಘು ಮಳೆಯಾಗಬಹುದು. ಇತರ ಪ್ರದೇಶಗಳಲ್ಲಿ ಹೆಚ್ಚಿನ ಮಳೆಯ ಸಾಧ್ಯತೆ ಇಲ್ಲ.
ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಒಣಹವೆಯ ವಾತಾವರಣ:
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಶಿವಮೊಗ್ಗ, ಕೊಡಗು ಹಾಗೂ ವಿಜಯನಗರ ಜಿಲ್ಲೆಗಳಲ್ಲೂ ಒಣಹವೆಯ ವಾತಾವರಣ ಮುಂದುವರಿಯಲಿದೆ. ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡದಲ್ಲಿಯೂ ಒಣಹವೆ ಇರಲಿದೆ.
ಉತ್ತರ ಒಳನಾಡಿನಲ್ಲಿ ಚಳಿ ಮತ್ತು ಒಣಹವೆ ಮುಂದುವರಿಕೆ:
ಉತ್ತರ ಒಳನಾಡಿನ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳಲ್ಲೂ ಕಳೆದ ಹಲವು ದಿನಗಳಿಂದ ಒಣಹವೆಯ ವಾತಾವರಣ ಮುಂದುವರಿದಿದೆ. ಇಂದೂ ಇದೇ ಪರಿಸ್ಥಿತಿ ಇರಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಆರೋಗ್ಯದ ಬಗ್ಗೆ ಎಚ್ಚರ ವಹಿಸುವಂತೆ ಸಲಹೆ:
ಚಳಿ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಮಕ್ಕಳು ಮತ್ತು ವಯೋವೃದ್ಧರು ತಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಎಚ್ಚರ ವಹಿಸಬೇಕೆಂದು ವೈದ್ಯರು ಸಲಹೆ ನೀಡಿದ್ದಾರೆ. ಚಳಿಯಿಂದ ರಕ್ಷಣೆ ಪಡೆಯಲು ಬೆಚ್ಚನೆಯ ಉಡುಪು ಧರಿಸುವುದು ಹಾಗೂ ಅಗತ್ಯ ಮುನ್ನೆಚ್ಚರಿಕೆ ವಹಿಸುವುದು ಉತ್ತಮ ಎಂದು ತಿಳಿಸಿದ್ದಾರೆ.


Click it and Unblock the Notifications