ಬೆಂಗಳೂರು, ಸೆ 12: "ರಾಜ್ಯದಲ್ಲಿ 251 ರೈತರ ಆತ್ಮಹತ್ಯೆ ಪ್ರಕರಣ ವರದಿಯಾಗಿದ್ದು, 174 ಪ್ರಕರಣಗಳಷ್ಟೇ ಇತ್ಯರ್ಥವಾಗಿದೆ. ಉಳಿದ ಪ್ರಕರಣಗಳನ್ನೂ ಶೀಘ್ರವೇ ವಿಲೇವಾರಿ ಮಾಡಿ, ಪರಿಹಾರ ವಿತರಿಸಬೇಕು" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ನಡೆದ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆಯಲ್ಲಿ ಮುಖ್ಯಮಂತ್ರಿಗಳು ಪ್ರಾಸ್ತಾವಿಕವಾಗಿ ಮಾತನಾಡಿದರು.

"ಖಾಸಗಿ ಲೇವಾದೇವಿದಾರರು-ಬ್ಯಾಂಕ್ ಗಳಿಂದ ರೈತರಿಗೆ ಕಿರುಕುಳ ಸಹಿಸಲ್ಲ . ಬರ ಘೋಷಣೆಯಾದ ನಂತರ ಖಾಸಗಿ ಲೇವಾದೇವಿದಾರರ ಮೇಲೆ ನಿಗಾ ಇಡಬೇಕು. ಬ್ಯಾಂಕುಗಳು ರೈತರಿಗೆ ಕಿರುಕುಳ ಕೊಡದಂತೆ ನೋಡಿಕೊಳ್ಳಬೇಕು" ಎಂದು ಸಿಎಂ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆಯನ್ನು ನೀಡಿದರು.
ಅಧಿಕಾರಿಗಳಿಗೆ ಸೌಲಭ್ಯ ನೀಡುವುದು, ಜನರ ಸಮಸ್ಯೆಗೆ ಸ್ಪಂದಿಸಿ ಉತ್ತಮವಾಗಿ ಕೆಲಸ ಮಾಡಬೇಕೆಂಬ ಉದ್ದೇಶದಿಂದ. ನೀವು ಚೆನ್ನಾಗಿ ಕೆಲಸ ಮಾಡಿದರೆ ಸರ್ಕಾರಕ್ಕೆ ಒಳ್ಳೆ ಹೆಸರು ಬರುತ್ತದೆ. ಕೆಲಸ ಮಾಡದಿದ್ದರೆ ಕೆಟ್ಟ ಹೆಸರು ಬರುತ್ತದೆ ಎನ್ನುವುದು ನೆನಪಿರಲಿ ಎಂದು ಸಿಎಂ ಕಿವಿಮಾತನ್ನು ಹೇಳಿದ್ದಾರೆ.
ಜನರಿಗೆ ಒಳ್ಳೆದಾಗ ಬೇಕು, ಅದಕ್ಕೋಸ್ಕರ ನಿಮ್ಮ ಧೋರಣೆಯನ್ನು ಬದಲಾಯಿಸಿಕೊಳ್ಳಬೇಕು. ಆರೋಗ್ಯ ಇಲಾಖೆಯಲ್ಲಿ ವೈದ್ಯರು ಲಭ್ಯವಿರುವುದಿಲ್ಲ. ಅರೆ ವೈದ್ಯಕೀಯ ಸಿಬ್ಬಂದಿಯೇ ವೈದ್ಯರ ಪಾತ್ರ ನಿರ್ವಹಿಸುವುದು, ಔಷಧ ಪ್ರಿಸ್ಕ್ರಿಪ್ಷನ್ ಬರೆಯುವುದು ಇವೆಲ್ಲ ಆಗಬಾರದು. ವೈದ್ಯರು ತಮ್ಮ ಕೇಂದ್ರ ಸ್ಥಾನದಲ್ಲಿಯೇ ಇದ್ದುಕೊಂಡು ಜನರ ಕಷ್ಟಗಳಿಗೆ ಸ್ಪಂದಿಸಬೇಕು ಎನ್ನುವ ಸೂಚನೆಯನ್ನು ಸಿಎಂ ನೀಡಿದರು.
ಅಧಿಕಾರಿಗಳಿಗೆ ಹೃದಯ ಸರಿಯಾಗಿ ಕೆಲಸ ಮಾಡಬೇಕು. ಮನುಷ್ಯತ್ವ ಇಲ್ಲದವರು ಸಾರ್ವಜನಿಕ ಸೇವೆಗೆ ಬರಬಾರದು. ನಿಮ್ಮ ನಿರ್ಲಕ್ಷ್ಯ ಮತ್ತು ಉಡಾಫೆತನದಿಂದ ಸರ್ಕಾರಕ್ಕೆ ಕೆಟ್ಟ ಹೆಸರು ಬಂದರೆ ನಾವು ಸುಮ್ಮನೆ ಕೂರುವುದಿಲ್ಲ ಎಂದು ಸಿದ್ದರಾಮಯ್ಯ ಈ ಸಂದರ್ಭದಲ್ಲಿ ಅಧಿಕಾರಿಗಳಿಗೆ ಎಚ್ಚರಿಕೆಯನ್ನು ನೀಡಿದರು.


Click it and Unblock the Notifications