ಬೆಂಗಳೂರು, ಜನವರಿ 12: ಬೆಂಗಳೂರಿನ ಮೆಟ್ರೋ ರೈಲು ನಿಗಮ ನಿಯಮಿತಕ್ಕೆ (ಬಿಎಂಆರ್‌ಸಿಎಲ್) ಪೂರ್ಣಾವಧಿ ವ್ಯವಸ್ಥಾಪಕ ನಿರ್ದೇಶಕರಾಗಿ ಎಂ. ಮಹಾಬಲೇಶ್ವರ ರಾವ್ ಐಎಎಸ್ ಅವರನ್ನು ನೇಮಕ ಮಾಡಲಾಗಿದೆ.
ಕೇಂದ್ರ ಸರ್ಕಾರವು ಈ ಸಂಬಂಧ ಆದೇಶ ಹೊರಡಿಸಿದೆ. ಬಿಎಂಆರ್‌ಸಿಎಲ್ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಅಜುಂ ಪರ್ವೇಜ್ ಅವರನ್ನು ವರ್ಗಾವಣೆ ಮಾಡಲಾಗಿದೆ. ಜನವರಿ 11ರ ಗುರುವಾರ ಕೇಂದ್ರದ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ ನೂತನ ಎಂಡಿ ಕುರಿತು ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ.

ಬೆಂಗಳೂರು ಮೆಟ್ರೋ ಯೋಜನೆಯನ್ನು ಬಿಎಂಆರ್‌ಸಿಎಲ್ ನಿರ್ವಹಣೆ ಮಾಡುತ್ತದೆ. ಎಂ. ಮಹಾಬಲೇಶ್ವರ ರಾವ್ 1995ನೇ ಬ್ಯಾಚ್‌ನ ಐಎಎಸ್ ಅಧಿಕಾರಿಯಾಗಿದ್ದಾರೆ. ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ವ್ಯವಸ್ಥಾಪಕ ನಿರ್ದೇಶಕರನ್ನು ಕೇಂದ್ರ ಸರ್ಕಾರದ ಅನುಮತಿ ಇಲ್ಲದೇ ವರ್ಗಾವಣೆ ಮಾಡುವಂತಿಲ್ಲ ಅಥವಾ ತೆಗೆದು ಹಾಕುವಂತಿಲ್ಲ ಎಂದು ಆದೇಶದಲ್ಲಿ ಸೂಚನೆ ನೀಡಲಾಗಿದೆ.
ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (ಬಿಎಂಆರ್‌ಸಿಎಲ್) ವ್ಯವಸ್ಥಾಪಕ ನಿರ್ದೇಶಕರಿಗೆ ಪೂರ್ಣಾವಧಿ ಹೊಣೆ ನೀಡುವ ಕುರಿತು ಕೇಂದ್ರ ಸರ್ಕಾರ ಮಧ್ಯಸ್ತಿಕೆವಹಿಸಬೇಕು ಎಂದು ಕೇಂದ್ರ ಸರ್ಕಾರದ ಗಮನ ಸೆಳೆದಿದ್ದರು.
ಸಂಸದ ತೇಜಸ್ವಿ ಸೂರ್ಯ ಕೇಂದ್ರದ ವಸತಿ ಮತ್ತು ನಗರ ವ್ಯವಹಾರಗಳ ಸಚಿವ ಹರ್ದೀಪ್ ಸಿಂಗ್ ಪುರಿ ಅವರನ್ನು ಭೇಟಿಯಾಗಿ ಬಿಎಂಆರ್‌ಸಿಎಲ್‌ಗೆ ಪೂರ್ಣ ಪ್ರಮಾಣದ ಎಂಡಿಯನ್ನು ನೇಮಕ ಮಾಡಬೇಕು ಎಂದು ಮನವಿ ಮಾಡಿದ್ದರು. ಪೂರ್ಣಾವಧಿ ಎಂಡಿ ನೇಮಕ ವಿಚಾರದಲ್ಲಿ ಕರ್ನಾಟಕ ಸರ್ಕಾರ ಗಂಭೀರವಾಗಿಲ್ಲ. ಆದ್ದರಿಂದ ನಮ್ಮ ಮೆಟ್ರೋ ಯೋಜನೆಗಳು ವಿಳಂಬವಾಗಿ, ವೆಚ್ಚವೂ ಹೆಚ್ಚಾಗುತ್ತಿದೆ ಎಂದು ಹೇಳಿದ್ದರು.
ಈಗ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ತೇಜಸ್ವಿ ಸೂರ್ಯ ಅವರು, ಕೊನೆಗೂ ನಮ್ಮ ಮೆಟ್ರೋಗೆ ಪೂರ್ಣ ಪ್ರಮಾಣದ ಎಂಡಿಯನ್ನು ಪಡೆಯಲಾಗಿದೆ. ನಗರದ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ತ್ವರಿತವಾಗಿ ಎಂಡಿ ನೇಮಕ ಮಾಡಿದಕ್ಕಾಗಿ ಕೇಂದ್ರ ಸಚಿವ ಹರ್ದಿಪ್ ಸಿಂಗ್ ಪುರಿ ಅವರಿಗೆ ಧನ್ಯವಾದ ತಿಳಿಸಿದ್ದಾರೆ.


Click it and Unblock the Notifications