ದೀಪಾವಳಿ (Deepavali) ಶುರುವಾದರೂ ಮಳೆ ಆರ್ಭಟ ಇನ್ನೂ ನಿಂತಿಲ್ಲ. ರಾಜ್ಯದಲ್ಲಿ ಕಳೆದ ನಾಲ್ಕೈದು ದಿನಗಳಲ್ಲಿಂದ ಭಾರೀ ಮಳೆಯಾಗುತ್ತಿದೆ. ಈಗಾಗಲೇ ಹವಾಮಾನ ಇಲಾಖೆ (IMD) ಕೂಡಾ ಮಳೆ ಅಲರ್ಟ್ ನೀಡಿತ್ತು. ಇದೀಗ ಈ ಎಚ್ಚರಿಕೆ ಇನ್ನೂ ಮೂರು ದಿನಗಳವರೆಗೆ ಮುಂದುವರೆಯುವ ಸಾಧ್ಯತೆ ಇದೆ. ಈ ಹಿನ್ನೆಲೆ ಟ್ರಾಫಿಕ್ ಸಮಸ್ಯೆ, ಮಾರ್ಕೆಟ್‌ಗಳಲ್ಲೂ ಹಲವು ಸಮಸ್ಯೆಗಳು ಎದುರಾಗಬಹುದು ಎನ್ನಲಾಗಿದೆ.

ಭಾರತೀಯ ಹವಾಮಾನ ಇಲಾಖೆ (IMD) ಕರ್ನಾಟಕ ರಾಜ್ಯದಲ್ಲಿ ಅಕ್ಟೋಬರ್ 20 ರಿಂದ ಮುಂದಿನ ಕೆಲವು ದಿನಗಳವರೆಗೆ ಭಾರೀ ಮಳೆಯಾಗಲಿದೆ ಎಂದು ಖಡಕ್ ಎಚ್ಚರಿಕೆ ನೀಡಿದೆ. ಕರಾವಳಿ ಕರ್ನಾಟಕದಲ್ಲಿ ಇಂದು (ಅಕ್ಟೋಬರ್ 20) ಗುಡುಗು ಸಹಿತ, ಭಾರೀ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಮಳೆಯಿಂದಾಗಿ ಪ್ರವಾಹ, ಭೂಕುಸಿತ ಮತ್ತು ಸಂಚಾರಕ್ಕೆ ಅಡಚಣೆಯಾಗುವ ಸಾಧ್ಯತೆಯಿದ್ದು, ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕು ಎಂದು IMD ಸೂಚಿಸಿದೆ.
ಎಲ್ಲೆಲ್ಲಿ ಮಳೆ ಅಲರ್ಟ್?
ಹವಾಮಾನ ಇಲಾಖೆಯ ಸೂಚನೆಯ ಪ್ರಕಾರ, ಅಕ್ಟೋಬರ್ 20 ರಿಂದ 23 ರವರೆಗೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ವರುಣಾರ್ಭಟ ಶುರುವಾಗಲಿದೆ. ಅದರಲ್ಲೂ ಕರಾವಳಿ ಭಾಗದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯೆತೆಯಿದ್ದು, ಈ ಪರಿಣಾಮ ಮೀನುಗಾರರು ಸಮುದ್ರಕ್ಕೆ ತೆರಳದಂತೆ ಸೂಚನೆ ನೀಡಲಾಗಿದೆ. ಇದಲ್ಲದೆ, ಅಕ್ಟೋಬರ್ 22 ರಿಂದ 25 ರವರೆಗೆ ಬೆಂಗಳೂರು ನಗರದಲ್ಲೂ ಭಾರೀ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಬೆಂಗಳೂರಿನಲ್ಲಿ ಇಂದು ಮತ್ತು ನಾಳೆ ಸಾಧಾರಣ ಮಳೆಯಾಗಲಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಹೆಚ್ಚಾಗಲಿದೆ ಎಂದು ನಿರೀಕ್ಷಿಸಲಾಗಿದೆ.
ಈ ಭಾಗದಲ್ಲೇ ಭಾರೀ ಮಳೆ
ಕರಾವಳಿ ಕರ್ನಾಟಕ: ಅಕ್ಟೋಬರ್ 20 ರಂದು ಈ ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂದು ಸೂಚನೆ ನೀಡಲಾಗಿದೆ. ಮುಂದಿನ ಎರಡು ದಿನಗಳಲ್ಲಿ ಸಾಧಾರಣದಿಂದ ಭಾರೀ ಮಳೆಯಾಗುವ ನಿರೀಕ್ಷೆಯಿದೆ.
ದಕ್ಷಿಣ ಒಳನಾಡು ಕರ್ನಾಟಕ: ಬೆಂಗಳೂರು, ಮೈಸೂರು, ಮಂಡ್ಯ ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಅಕ್ಟೋಬರ್ 20 ರಂದು ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯಾಗಲಿದೆ ಎನ್ನಲಾಗಿದೆ. ಮುಂದಿನ ಏಳು ದಿನಗಳಲ್ಲಿ ದಕ್ಷಿಣ ಒಳನಾಡು ಪ್ರದೇಶಗಳಲ್ಲಿ ಮಳೆಯ ತೀವ್ರತೆ ಹೆಚ್ಚಾಗಬಹುದು ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಉತ್ತರ ಒಳನಾಡು ಕರ್ನಾಟಕ: ಬಳ್ಳಾರಿ, ವಿಜಯಪುರ ಮತ್ತು ಗದಗ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದ್ದು, ಜನರು ಎಚ್ಚರಿಕೆಯಿಂದಿರುವಂತೆ ಸೂಚನೆ ನೀಡಲಾಗಿದೆ.
IMDಯ ಪ್ರಕಾರ, ರಾಜ್ಯದಲ್ಲಿ ಭಾರೀ ಮಳೆಯಾಗಲು, ಮುಂಗಾರು ಹಿಂಗಾರು ಮಾನ್ಸೂನ್ ಕಾರಣ ಎಂದು ಹೇಳಲಾಗಿದೆ. ಅಲ್ಲದೇ ಅರಬ್ಬಿ ಸಮುದ್ರದಲ್ಲಿ ಉಂಟಾದ ಕಡಿಮೆ ಒತ್ತಡವೂ ಕಾರಣವಾಗಿದೆ. ಇನ್ನು ಮಳೆ ಅವಾಂತರವನ್ನು ತಪ್ಪಿಸಲು, ಸರ್ಕಾರಿ ಅಧಿಕಾರಿಗಳು ತುರ್ತು ಸೇವೆಗಳನ್ನು ಸಿದ್ಧಪಡಿಸಿದ್ದು, ಸಾರ್ವಜನಿಕರು, ನದಿ ತೀರಗಳಿಂದ, ಸಮುದ್ರಗಳಿಂದ ದೂರವಿರಬೇಕು ಮತ್ತು ವಾಹನ ಚಾಲನೆಯಲ್ಲಿ ಎಚ್ಚರಿಕೆ ವಹಿಸಬೇಕು ಎಂದು ಸಲಹೆ ನೀಡಲಾಗಿದೆ.


Click it and Unblock the Notifications