ಬೆಂಗಳೂರು, ಸೆಪ್ಟೆಂಬರ್ 18: ಕಲಬುರಗಿಯಲ್ಲಿ ನಡೆದ ಕರ್ನಾಟಕ ಸಚಿವ ಸಂಪುಟ ಸಭೆಯಲ್ಲಿ ಕಲ್ಯಾಣ ಕರ್ನಾಟಕದ ಜಿಲ್ಲೆಗಳಲ್ಲಿ ಖಾಲಿ ಇರುವ 17,430 ಹುದ್ದೆಗಳನ್ನು ಭರ್ತಿ ಮಾಡಲು ನಿರ್ಧರಿಸಿದೆ. ಸಂಪುಟ ಸಭೆಯಲ್ಲಿ ಕೈಗೊಂಡ ನಿರ್ಣಯಗಳ ಕುರಿತು ಮಾಹಿತಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಖಾಲಿ ಇರುವ ಹುದ್ದೆಗಳ ಭರ್ತಿಗೆ ಹಂತ ಹಂತವಾಗಿ ಕ್ರಮಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
ಆದರೆ ಈ 17,430 ಹುದ್ದೆಗಳ ಭರ್ತಿ ಮಹತ್ವದ ನಿರ್ಧಾರವನ್ನು ಜಾರಿಗೆ ತರಲು ನಿರ್ದಿಷ್ಟ ಗಡುವನ್ನು ನಿಗದಿಪಡಿಸಿಲ್ಲ. ಮಂಗಳವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ 56 ವಿಷಯಗಳ ಕುರಿತು ಚರ್ಚಿಸಲಾಗಿದ್ದು, ಅದರಲ್ಲಿ 46 ಕಲ್ಯಾಣ ಕರ್ನಾಟಕಕ್ಕೆ ಸಂಬಂಧಿಸಿದೆ. ಸಂಪುಟ ಸಭೆಯಲ್ಲಿ ಅನುಮೋದನೆ ಪಡೆದ 46 ವಿಷಯಗಳ ಕಾಮಗಾರಿಗಳ ಅಂದಾಜು ವೆಚ್ಚ 11,770 ಕೋಟಿ ರೂ. ಎಂದು ಅವರು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಬೀದರ್‌ನಲ್ಲಿ ನೂತನ ಜಿಲ್ಲಾ ಮಟ್ಟದ ಸರ್ಕಾರಿ ಕಚೇರಿ ಸಂಕೀರ್ಣ ನಿರ್ಮಿಸಲು ಸಚಿವ ಸಂಪುಟ ಸಭೆ ನಿರ್ಧರಿಸಿದೆ. ಮಿನಿ ವಿಧಾನಸೌಧವನ್ನು ಪ್ರಜಾಸೌಧ ಎಂದು ಮರುನಾಮಕರಣ ಮಾಡಲು ಸಚಿವ ಸಂಪುಟ ಸಭೆ ನಡೆಸಬೇಕು ಎಂದು ಘೋಷಿಸಿದ ಅವರು, ಕಲ್ಯಾಣ ಕರ್ನಾಟಕ ಭಾಗದ 16 ಹೊಸ ತಾಲೂಕುಗಳಲ್ಲಿ ನೂತನ ಪ್ರಜಾ ಸೌಧಗಳನ್ನು ನಿರ್ಮಿಸಲಾಗುವುದು. ಅಂದಾಜು ಮೊತ್ತದ ಅರ್ಧದಷ್ಟು ಮೊತ್ತವನ್ನು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಭರಿಸಲಿದೆ ಎಂದರು.
ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಸಚಿವಾಲಯ:
ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಕಾರ್ಯಗಳನ್ನು ಹೆಚ್ಚು ಪರಿಣಾಮಕಾರಿಯಾಗಿ ಜಾರಿಗೊಳಿಸಲು ಮತ್ತು ಮೇಲುಸ್ತುವಾರಿ ಮಾಡಲು ಪ್ರತ್ಯೇಕ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಸಚಿವಾಲಯ ಸ್ಥಾಪನೆಗೆ ನಿರ್ಧಾರ ಮಾಡಲಾಗಿದೆ. ಇದರೊಂದಿಗೆ ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಕೆರೆ ತುಂಬಿಸುವ ಕಾಮಗಾರಿಯನ್ನು ರೂ.135 ಕೋಟಿ ಅಂದಾಜು ಮೊತ್ತದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.
ಕೊಪ್ಪಳ ಜಿಲ್ಲೆಯ ತಳಕಲ್‌ನಲ್ಲಿ ಜಿ.ಟಿ.ಟಿ.ಸಿ. ಬಹುಕೌಶಲ್ಯಾಭಿವೃದ್ಧಿ ಕೇಂದ್ರವನ್ನು ಕೆ.ಕೆ.ಆರ್.ಡಿ.ಬಿ.ಯ ರೂ.53 ಕೋಟಿ ಅನುದಾನದಲ್ಲಿ ನಿರ್ಮಿಸಲು ನಿರ್ಧಾರ ಮಾಡಲಾಗಿದೆ. ಬೆಂಗಳೂರಿನ ಹೆಬ್ಬಾಳದ ಬಳಿ ಕೃಷಿ ಇಲಾಖೆಯ ಜಂಟಿ ಸಹಭಾಗಿತ್ವದಲ್ಲಿ ಕರ್ನಾಟಕ ರಾಜ್ಯ ಪಾನೀಯ ನಿಗಮ ನಿಯಮಿತದ ಕಚೇರಿ ಕಟ್ಟಡವನ್ನು ರೂ.56 ಕೋಟಿ ಅಂದಾಜು ಮೊತ್ತದಲ್ಲಿ ನಿರ್ಮಿಸಲು ತೀರ್ಮಾನ ಮಾಡಲಾಗಿದೆ.
ಚಾಮರಾಜನಗರದಲ್ಲಿ ಆಸ್ಪತ್ರೆಗೆ ರೂ.149 ಕೋಟಿ:
ಗದಗ, ಕೊಪ್ಪಳ ಮತ್ತು ಚಾಮರಾಜನಗರದಲ್ಲಿನ 450 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆಗಳಿಗೆ ಅವಶ್ಯವಿರುವ ವೈದ್ಯಕೀಯ ಉಪಕರಣ ಮತ್ತು ಪೀಠೋಪಕರಣಗಳನ್ನು ಖರೀದಿಸಲು ರೂ.149 ಕೋಟಿ ಅಂದಾಜು ಮೊತ್ತಕ್ಕೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ವೈದ್ಯಕೀಯ ಶಿಕ್ಷಣ ಇಲಾಖೆಯಡಿ ಬರುವ ವೈದ್ಯಕೀಯ ಕಾಲೇಜುಗಳ ಆಸ್ಪತ್ರೆಗಳು ಮತ್ತು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳಿಗೆ ಎಂಆರ್‌ಐ ಯಂತ್ರಗಳನ್ನು ರೂ.85 ಕೋಟಿ ವೆಚ್ಚದಲ್ಲಿ ಖರೀದಿಸಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.
ಕರ್ನಾಟಕ ರಾಜ್ಯ ವಕ್ಸ್ ಮಂಡಳಿಯ ಮೂಲಕ 15 ಮಹಿಳಾ ಪದವಿ ಪೂರ್ವ ಕಾಲೇಜು ಕಟ್ಟಡ ನಿರ್ಮಾಣ ಕಾಮಗಾರಿಯನ್ನು ರೂ.447 ಕೋಟಿ ವೆಚ್ಚದಲ್ಲಿ ಅನುಷ್ಠಾನಗೊಳಿಸಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ (ತಿದ್ದುಪಡಿ) ವಿಧೇಯಕ - 2024ಕ್ಕೆ ಅನುಮೋದನೆ ನೀಡಲಾಗಿದೆ.
2 ಸೇತುವೆ ಕಾಮಗಾರಿ:
ಪ್ರಧಾನಮಂತ್ರಿ ಜನ್‌ಜಾತಿ ಆದಿವಾಸಿ ನ್ಯಾಯ ಮಹಾ ಅಭಿಯಾನ ಯೋಜನೆಯಡಿ ಪಿ.ಎಂ.ಜಿ.ಎಸ್.ವೈ. ಮಾದರಿಯಂತೆ 23 ಕಿ.ಮೀ. ಉದ್ದದ 18 ರಸ್ತೆಗಳು ಮತ್ತು 2 ಸೇತುವೆ ಕಾಮಗಾರಿಗಳನ್ನು ರೂ.30.47 ಕೋಟಿ ವೆಚ್ಚದಲ್ಲಿ ಅನುಷ್ಠಾನಗೊಳಿಸಲು ತೀರ್ಮಾನ ಮಾಡಲಾಗಿದೆ. ಗದಗ ಜಿಲ್ಲೆಯ ರೋಣದಲ್ಲಿ ರೂ.50 ಕೋಟಿ ಅಂದಾಜು ವೆಚ್ಚದಲ್ಲಿ ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರ ಸ್ಥಾಪನೆ ಹಾಗೂ ಕಟ್ಟಡ ನಿರ್ಮಾಣ, ಮೂಲಸೌಕರ್ಯ ಅಭಿವೃದ್ಧಿ ಕಾರ್ಯಗಳನ್ನು ಕೈಗೆತ್ತಿಕೊಳ್ಳಲು ತೀರ್ಮಾನ ಮಾಡಲಾಗಿದೆ.
ಕರ್ನಾಟಕ ರಾಜ್ಯಾದ್ಯಂತ 43 ಸ್ಥಿರ ಮತ್ತು ಸಂಚಾರಿ "ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಕಾರ್ಮಿಕ ಸೇವಾ ಕೇಂದ್ರ"ಗಳನ್ನು ಒಟ್ಟು ರೂ.48 ಕೋಟಿಗಳ ವೆಚ್ಚದಲ್ಲಿ ಸ್ಥಾಪಿಸಲು ನಿರ್ಧಾರ ಹಾಗೂ ಹಟ್ಟಿ ಚಿನ್ನದ ಗಣಿ ಕಂಪನಿಯ ಅಧಿಕಾರಿ, ಸಿಬ್ಬಂದಿಗಳಿಗೆ ವಸತಿ ಸಮುಚ್ಚಯ ನಿರ್ಮಾಣ ಮಾಡಲು ಉದ್ದೇಶಿಸಿರುವ ಸಮಗ್ರ ಟೌನ್‌ಶಿಪ್ ಯೋಜನೆಯ ಅಂದಾಜು ವೆಚ್ಚ ರೂ.998 ಕೋಟಿಗಳಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.
ಬಾಂದಾರು ಸಹಿತ ಸೇತುವೆ :
ರಾಯಚೂರು ಮತ್ತು ಬೀದರ್ ನಗರ ಸಭೆಯನ್ನು ಮಹಾನಗರ ಪಾಲಿಕೆಯಾಗಿ ಮೇಲ್ದರ್ಜೆಗೇರಿಸಲು ನಿರ್ಧಾರ ಮಾಡಲಾಗಿದೆ. ಕಲಬುರಗಿ ವಿಶ್ವವಿದ್ಯಾಲಯದ ಆವರಣದಲ್ಲಿ ಜಿ.ಟಿ.ಟಿ.ಸಿ. ಬಹುಕೌಶಲ್ಯಾಭಿವೃದ್ಧಿ ಕೇಂದ್ರವನ್ನು ಕೆ.ಕೆ.ಆರ್.ಡಿ.ಬಿ.ಯ ರೂ.53 ಕೋಟಿ ಅನುದಾನದಲ್ಲಿ ನಿರ್ಮಿಸಲು ನಿರ್ಧಾರ ಮಾಡಲಾಗಿದೆ. ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಹರವಳ ಗ್ರಾಮದ ಹತ್ತಿರ ಭೀಮಾ ನದಿಗೆ ಅಡ್ಡಲಾಗಿ ಬಾಂದಾರು ಸಹಿತ ಸೇತುವೆ ನಿರ್ಮಿಸುವ ರೂ.130 ಕೋಟಿ ವೆಚ್ಚದ ಕಾಮಗಾರಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.
ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಕುರ್ಡಿ ಕೆರೆ ತುಂಬಿಸುವ ಯೋಜನೆಯನ್ನು ರೂ. 132 ಕೋಟಿ ಅಂದಾಜು ಮೊತ್ತದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ಬೀದರ್ ಜಿಲ್ಲೆಯ ಹೊನ್ನಿಕೇರಿ ಮೀಸಲು ಅರಣ್ಯ ಮತ್ತು ಇತರೆ ಜೀವ ವೈವಿಧ್ಯ ಪ್ರದೇಶಗಳಲ್ಲಿ ಪರಿಸರ ಪ್ರವಾಸೋದ್ಯಮ ಹಾಗೂ ಸಂರಕ್ಷಣಾತ್ಮಕ ಕಾರ್ಯಗಳನ್ನು ಕೆ.ಕೆ.ಆರ್.ಡಿ.ಬಿ. ಅನುದಾನದಲ್ಲಿ ರೂ. 15 ಕೋಟಿ ವೆಚ್ಚದಲ್ಲಿ ಅನುಷ್ಠಾನಗೊಳಿಸಲು ನಿರ್ಧಾರ ಮಾಡಲಾಗಿದೆ.
ಕಲಬುರಗಿಯಲ್ಲಿ ಸ್ಥಾಪಿಸಲು ಉದ್ದೇಶಿಸಿರುವ ಪಿಎಂ ಮಿತ್ರ ಜವಳಿ ಪಾರ್ಕ್‌ಗೆ ನೀರು ಸರಬರಾಜು, ಭೀಮಾ ನದಿಗೆ ಅಡ್ಡಲಾಗಿ ಅಣೆಕಟ್ಟು, ವಿದ್ಯುತ್ ಸ್ಥಾವರ ನಿರ್ಮಾಣ, ರಸ್ತೆ ಮುಂತಾದ ಕಾಮಗಾರಿಗಳಿಗೆ ಒಟ್ಟು ರೂ.390 ಕೋಟಿ ಅನುದಾನ ನೀಡಲು ನಿರ್ಧಾರ ಮಾಡಲಾಗಿದೆ. ಬೀದರ್ ಜಿಲ್ಲೆಯ ಜಿಲ್ಲಾ ಕಚೇರಿಗಳ ಸಂಕೀರ್ಣ ನಿರ್ಮಾಣ ಕಾಮಗಾರಿಯನ್ನು ರೂ.59 ಕೋಟಿ ಪರಿಷ್ಕೃತ ವೆಚ್ಚದಲ್ಲಿ ಕೈಗೆತ್ತಿಕೊಳ್ಳಲು ಅನುಮೋದನೆ ನೀಡಲಾಗಿದೆ.
ಕಲಬುರಗಿ ಜಿಲ್ಲೆಯ ಚಿತ್ತಾಪುರ ಪಟ್ಟಣದಲ್ಲಿ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯ (ಪರಿಶಿಷ್ಟ ಜಾತಿ) ಕಟ್ಟಡವನ್ನು ರೂ.12 ಕೋಟಿ ವೆಚ್ಚದಲ್ಲಿ ನಿರ್ಮಿಸಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ಕಲ್ಯಾಣ ಕರ್ನಾಟಕ ವ್ಯಾಪ್ತಿಯ ಜಿಲ್ಲೆಗಳಲ್ಲಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ 12 ಪರಿಶಿಷ್ಟ ಜಾತಿ ಮತ್ತು 1 ಪರಿಶಿಷ್ಟ ವರ್ಗಗಳ ವಸತಿ ಶಾಲೆಗಳಿಗೆ ರೂ.286 ಕೋಟಿ ವೆಚ್ಚದಲ್ಲಿ ಸ್ವಂತ ಕಟ್ಟಡ ನಿರ್ಮಾಣ ಮಾಡಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.
ಸಿಂಧನೂರು ಪಟ್ಟಣಕ್ಕೆ ಕುಡಿಯುವ ನೀರು ಒದಗಿಸಲು ಮೊದಲ ಹಂತದಲ್ಲಿ ರೂ.29 ಕೋಟಿ ವೆಚ್ಚದಲ್ಲಿ ಕೆರೆ ನಿರ್ಮಾಣ ಮಾಡಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.


Click it and Unblock the Notifications