ಬೆಂಗಳೂರು, ಜುಲೈ 31: ರಾಜ್ಯದ ಹಲವು ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದ್ದು ಪ್ರವಾಹ, ಭೂಕುಸಿತದಂತಹ ಪರಿಸ್ಥಿತಿ ಎದುರಿಸಲು ಎಲ್ಲ ಜಿಲ್ಲಾಧಿಕಾರಿಗಳು ಕಟ್ಟೆಚ್ಚರ ವಹಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದ್ದಾರೆ.
ಕರಾವಳಿ ಮತ್ತು ಮಲೆನಾಡು ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಎಲ್ಲಾ ಜಲಾಶಯಗಳ ಒಳಹರಿವು ಮತ್ತು ನೀರಿನ ಮಟ್ಟವನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡಲು ಅಧಿಕಾರಿಗಳಿಗೆ ಸೂಚಿಸಿದ ಅವರು, ಪ್ರವಾಹ ಪೀಡಿತ ಪ್ರದೇಶಗಳಲ್ಲಿ ತಗ್ಗು ಪ್ರದೇಶಗಳಲ್ಲಿ ವಾಸಿಸುವ ಜನರನ್ನು ಸ್ಥಳಾಂತರಿಸಲು ತಿಳಿಸಿದ್ದಾರೆ. ಅಧಿಕಾರಿಗಳು ಪ್ರವಾಹ ಪರಿಸ್ಥಿತಿಯನ್ನು ಸಮರೋಪಾದಿಯಲ್ಲಿ ನಿರ್ವಹಿಸುವಂತೆ , ರಕ್ಷಣೆ ಹಾಗೂ ಪರಿಹಾರ ಕಾರ್ಯಚರಣೆಗಳನ್ನು ಕೈಗೊಳ್ಳುವಂತೆ ಹಾಗೂ ಪ್ರವಾಹ ಪೀಡಿತರಿಗೆ ಅಗತ್ಯಕ್ಕನುಸಾರವಾಗಿ ಕಾಳಜಿ ಕೇಂದ್ರಗಳನ್ನು ತೆರೆದು ಎಲ್ಲ ಸೌಲಭ್ಯಗಳನ್ನು ಕಲ್ಪಿಸುವಂತೆ ಸೂಚಿಸಿದ್ದಾರೆ.

ಎಲ್ಲ ಜಿಲ್ಲೆಗಳಲ್ಲಿ ನಿಯಂತ್ರಣ ಕೊಠಡಿ ತೆರೆದು 24X7 ಕಾರ್ಯ ನಿರ್ವಹಿಸಲು ವ್ಯವಸ್ಥೆ ಮಾಡುವಂತೆ ಸೂಚಿಸಿದ್ದಾರೆ.ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿಯೇ ಲಭ್ಯರಿದ್ದು ಎಚ್ಚರ ವಹಿಸುವಂತೆ ಸೂಚಿಸಿದ್ದಾರೆ. ವಯನಾಡಿನಲ್ಲಿ ರಕ್ಷಣಾ ಕಾರ್ಯಾಚರಣೆಗೆ ನೆರವಾಗಲು ಕೇರಳಕ್ಕೆ ಭಾರವಾದ ಮಣ್ಣು ಸಾಗಿಸುವ ಯಂತ್ರಗಳನ್ನು ಪೂರೈಸಲು ಸೂಚನೆಗಳನ್ನು ನೀಡಿದ್ದಾರೆ.
ರಸ್ತೆ ತಡೆ:
ಮುಂಜಾಗ್ರತಾ ಕ್ರಮವಾಗಿ ಗುಂಡ್ಲುಪೇಟೆ ರಾಷ್ಟ್ರೀಯ ಹೆದ್ದಾರಿ 766 ಮೂಲಕ ಬೆಂಗಳೂರು-ವಯನಾಡು ಸಂಚಾರವನ್ನು ಬಂದ್ ಮಾಡಲಾಗಿದೆ. ಆದರೆ, ಗುಂಡ್ಲುಪೇಟೆ-ಬಂಡಿಪುರ-ಗುಡಲೂರು ಪರ್ಯಾಯ ರಸ್ತೆಯಲ್ಲಿ ವಾಹನ ಮಾಲೀಕರಿಗೆ ಅವಕಾಶ ಕಲ್ಪಿಸಲಾಗಿದೆ. ಮೈಸೂರು ಜಿಲ್ಲೆ ವಯನಾಡಿನಿಂದ ಗಾಯಾಳುಗಳನ್ನು ಕೆ.ಆರ್.ಆಸ್ಪತ್ರೆ, ಮೈಸೂರು ಮತ್ತು ಎಚ್.ಡಿ.ಕೋಟೆಯಲ್ಲಿ ಸ್ವೀಕರಿಸಲು ಸಕಲ ವ್ಯವಸ್ಥೆ ಮಾಡಿದೆ. ಅಲ್ಲದೆ, ವಯನಾಡಿನಿಂದ ಮೈಸೂರಿಗೆ ರೋಗಿಗಳನ್ನು ಕರೆತರಲು ಬಸ್ ಮತ್ತು ಇತರ ಸಾರಿಗೆ ವ್ಯವಸ್ಥೆ ಮಾಡಲಾಗಿದೆ.
ಹಿರಿಯ ಐಎಎಸ್ ಅಧಿಕಾರಿಗಳ ನಿಯೋಜನೆ: ಸಿಎಂ
ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೂಕುಸಿತದಿಂದ ಸಂಕಷ್ಟದಲ್ಲಿರುವ ಜನರ ನೆರವಿಗಾಗಿ ಇಬ್ಬರು ಹಿರಿಯ ಐಎಎಸ್ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಹಾಗೆಯೇ ಗಡಿಜಿಲ್ಲೆ ಚಾಮರಾಜ ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಹಾಯವಾಣಿ ತೆರೆಯಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿದ್ದಾರೆ.


Click it and Unblock the Notifications