ಕರ್ನಾಟಕದಲ್ಲಿ (Karnataka) ಕಳೆದ ಕೆಲವು ವಾರಗಳಿಂದ ಬಿಸಿಲಬ್ಬರ ಜೋರಾಗಿಯೇ ಇತ್ತು. ಇದೀಗ ಕಳೆದೆರಡು ದಿನಗಳಿಂದ ಮಳೆಯಬ್ಬರ ಶುರುವಾಗಿದೆ. ಯುಗಾದಿ ಹಬ್ಬ (Ugadi Festival) ಅಂದರೆ ಹೊಸ ವರ್ಷ ಆರಂಭವಾಗುತ್ತಿದ್ದಂತೆ ಇದೀಗ ಕರ್ನಾಟಕ ರಾಜ್ಯದಲ್ಲಿ ಮಳೆರಾಯನ ಆಗಮನವಾಗಿದ್ದು, ಈ ವಾರ ಬೇಸಿಗೆಯ ಜೊತೆಗೆ ಹವಾಮಾನದಲ್ಲಿ ಸ್ವಲ್ಪ ಏರಿಳಿತಗಳಾಗಿದೆ. ಭಾರತೀಯ ಹವಾಮಾನ ಇಲಾಖೆ (IMD) ವರದಿ ಪ್ರಕಾರ, ರಾಜ್ಯದ ಹಲವು ಭಾಗಗಳಲ್ಲಿ ಗುಡುಗು ಸಹಿತ, ಮಧ್ಯಮ ಮಳೆಯಾಗುವ ಸಾಧ್ಯತೆ ಇದೆ. ವಿಶೇಷವಾಗಿ ದಕ್ಷಿಣ ಒಳನಾಡು, ಉತ್ತರ ಒಳನಾಡು ಮತ್ತು ಕರಾವಳಿ ಪ್ರದೇಶಗಳಲ್ಲಿ ಮಳೆ ಬೀಳುವ ಸಾಧ್ಯತೆ ಇದ್ದು, ಕೆಲವು ಕಡೆಗಳಲ್ಲಿ ಬಿಸಿಲಿನ ತಾಪಮಾನವೂ ಹೆಚ್ಚಾಗುವ ನಿರೀಕ್ಷೆಯಿದೆ.

ಬೆಂಗಳೂರಿನಲ್ಲಿ ಹೇಗಿರಲಿದೆ ಹವಾಮಾನ?
ಇಂದು ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 32-34 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19-21 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ವರದಿಯಾಗಿದೆ. ಇನ್ನು ಮಧ್ಯಾಹ್ನದ ನಂತರ ಮೋಡಕವಿದ ವಾತಾವರಣ ಇರಲಿದ್ದು, ಜೊತೆಗೆ ಮಧ್ಯಮ ಮಳೆ ಬೀಳುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಬೆಳಿಗ್ಗೆ ಮತ್ತು ಸಂಜೆ ಸಮಯದಲ್ಲಿ ಗಾಳಿ ಬೀಸಲಿದ್ದು. ಒಟ್ಟಾರೆಯಾಗಿ ತಂಪಾದ ವಾತಾವರಣ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕಂಡುಬರಲಿದೆ.
ಕರಾವಳಿಯಲ್ಲೂ ಮಳೆಯಬ್ಬರ
ಇನ್ನು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಧ್ಯಮ ಮಳೆ ಜೊತೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಅಲ್ಲದೇ ತಾಪಮಾನ 28-32 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಸೂಚನೆ ನೀಡಲಾಗಿದೆ.
ದಕ್ಷಿಣ ಒಳನಾಡು ಜಿಲ್ಲೆಗಳು:
ಮೈಸೂರು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಮಂಡ್ಯ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ ಜಿಲ್ಲೆಗಳಲ್ಲಿ ಸಂಜೆ ವೇಳೆಗೆ ಮಳೆಯಾಗುವ ಸಾಧ್ಯತೆ ಇದ್ದು, ರಾತ್ರಿ ವೇಳೆ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.
ಇನ್ನು ಉತ್ತರ ಒಳನಾಡು ಜಿಲ್ಲೆಗಳಾದ ಬಳ್ಳಾರಿ, ಕಲಬುರಗಿ, ಬೀದರ್, ವಿಜಯಪುರ ಜಿಲ್ಲೆಗಳಲ್ಲಿ ಹೆಚ್ಚಾಗಿ ಶುಷ್ಕ ಹವಾಮಾನ ಇರಲಿದ್ದು, ಕೆಲವೆಡೆ ಮಧ್ಯಮ ಮಳೆಯಾಗಿದೆ ಎಂದು ವರದಿಯಾಗಿದೆ. ಇನ್ನು ತಾಪಮಾನ 35-37 ಡಿಗ್ರಿ ಇರಲಿದೆ ಎಂದು ವರದಿಯಾಗಿದೆ. ಹಾಗೆಯೇ ಕೊಡಗು, ಚಿಕ್ಕಮಗಳೂರು, ಬೆಳಗಾವಿ ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾಗಬಹುದು ಎಂದು ಹೇಳಲಾಗಿದೆ. ಅಲ್ಲದೇ ಈಗಾಗಲೇ ಆಲಿಕಲ್ಲು ಮಳೆ ಬಿದ್ದಿದ್ದು, ಇದೇ ರೀತಿಯ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಹವಾಮಾನ ಇಲಾಖೆ ವರದಿಯ ಪ್ರಕಾರ, ಕೆಲವು ಜಿಲ್ಲೆಗಳಲ್ಲಿ ಗಾಳಿಯ ವೇಗ 40-60 ಕಿ.ಮೀ ವರೆಗೆ ಹೆಚ್ಚಾಗಬಹುದು ಮತ್ತು ಗುಡುಗು, ಬಿರುಗಾಳಿಯೊಂದಿಗೆ ಮಳೆಯ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಹವಾಮಾನ ಇಲಾಖೆಯ ಪ್ರಕಾರ, ರಾಜ್ಯದಲ್ಲಿ ಮಳೆಯು ಮಾರ್ಚ್ 20ರ ತನಕ ಮುಂದುವರೆಯುವ ಸಾಧ್ಯತೆ ಇದ್ದು, ನಂತರ ಮಾರ್ಚ್ 25 ಅಥವಾ 27ರ ತನಕ ಕರಾವಳಿ ಜಿಲ್ಲೆಗಳಲ್ಲಿ, ಮಲೆನಾಡಿನ ಕೊಡಗು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹೇಳಲಾಗಿದೆ.


Click it and Unblock the Notifications