ರಾಜ್ಯದಲ್ಲಿ ಅನುಷ್ಠಾನಗೊಳಿಸಲಾಗುತ್ತಿರುವ ಮೂಲಸೌಕರ್ಯ ಯೋಜನೆಗಳ ಪ್ರಗತಿ ಮೇಲ್ವಿಚಾರಣೆಗೆ ಹಾಗೂ ಎದುರಾಗುವ ಅಂತರ್ ಇಲಾಖಾ ಮತ್ತು ಹಣಕಾಸಿನ ತೊಡಕುಗಳನ್ನು ಬಗೆಹರಿಸಲು ಮುಖ್ಯಮಂತ್ರಿಗಳ ಕಚೇರಿಯಲ್ಲಿ ಪ್ರತ್ಯೇಕ ಘಟಕವನ್ನು ಸ್ಥಾಪಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಕೇಣಿಯಲ್ಲಿ 30 MTPA ಸಾಮರ್ಥ್ಯದ ಮತ್ತು 4700 ಕೋಟಿ ರೂ. ಅಂದಾಜು ಯೋಜನಾ ವೆಚ್ಚದ ಹೊಸ ಆಳಸಮುದ್ರ ಸರ್ವಋತು ಬಂದರನ್ನು ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಅಭಿವೃದ್ಧಿಪಡಿಸಲಾಗುತ್ತಿದೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ರಾಜ್ಯದಲ್ಲಿ ರೈಲ್ವೆ ಇಲಾಖೆಯೊಂದಿಗೆ ವೆಚ್ಚ ಹಂಚಿಕೆ ಆಧಾರದಲ್ಲಿ 12,147 ಕೋಟಿ ರೂ.ಗಳ 9 ರೈಲ್ವೆ ಕಾಮಗಾರಿಗಳು ಪ್ರಗತಿಯಲ್ಲಿವೆ. ಈ ಯೋಜನೆಯ ಕಾಮಗಾರಿಗಳು ಹಾಗೂ ಭೂಸ್ವಾಧೀನಕ್ಕಾಗಿ 9,915 ಕೋಟಿ ರೂ.ಗಳನ್ನು ರಾಜ್ಯ ಸರ್ಕಾರ ಭರಿಸಲಿದೆ. 2023-24ನೇ ಸಾಲಿನಲ್ಲಿ 600 ಕೋಟಿ ರೂ.ಗಳನ್ನು ರೈಲ್ವೆ ಯೋಜನೆಗಳಿಗಾಗಿ ಬಿಡುಗಡೆಗೊಳಿಸಲಾಗಿದೆ. ಕೇಂದ್ರ ಸರ್ಕಾರದ ಪಾಲನ್ನು ಕ್ಷಿಪ್ರಗತಿಯಲ್ಲಿ ಪಡೆದು ಆದ್ಯತೆಯನುಸಾರ ರಾಜ್ಯದ ಪಾಲಿನ ಅನುದಾನ ಬಿಡುಗಡೆ ಮಾಡಿ ಕಾಮಗಾರಿಗಳನ್ನು ಪೂರ್ಣಗೊಳಿಸಲಾಗುವುದು ಎಂದು ಸಿದ್ಧರಾಮಯ್ಯ ತಿಳಿಸಿದ್ದಾರೆ.
ರಾಜ್ಯದ 320 ಕಿ.ಮೀ. ಉದ್ದದ ಕರಾವಳಿ ತೀರವನ್ನು ಆರ್ಥಿಕ ಅಭಿವೃದ್ಧಿಗೆ ಸಮರ್ಥವಾಗಿ ಬಳಸಿಕೊಳ್ಳಲು ಆದ್ಯತೆ ನೀಡಲಾಗುವುದು. ಬಂದರು, ರೈಲು ಮತ್ತು ವಿಮಾನ ಸಂಪರ್ಕವನ್ನು ಒದಗಿಸುವ ಮೂಲಕ ಕೆಲವು ವರ್ಷಗಳಲ್ಲಿ ಅಂದಾಜು 20,000 ಕೋಟಿ ರೂ.ಗಳ ಹೂಡಿಕೆಯೊಂದಿಗೆ ಸಮುದ್ರ ಸಾರಿಗೆ, ಸರಕು ಸಾಗಣೆ ಹಾಗೂ ಪರಿಸರ ಪ್ರವಾಸೋದ್ಯಮ ವಲಯಗಳಲ್ಲಿ ಗಣನೀಯ ಅಭಿವೃದ್ಧಿ ಸಾಧಿಸುವ ಗುರಿ ಹೊಂದಿರುವುದಾಗಿ ಹೇಳಿದ್ದಾರೆ.
ರಾಜ್ಯದಲ್ಲಿ ಜಲಸಾರಿಗೆ ಮೂಲಸೌಕರ್ಯಗಳ ಅಭಿವೃದ್ಧಿಯಲ್ಲಿ ಖಾಸಗಿ ಹೂಡಿಕೆಗಳನ್ನು ಆಕರ್ಷಿಸಲು, ಕರ್ನಾಟಕ ಜಲಸಾರಿಗೆ ಅಭಿವೃದ್ಧಿ ನೀತಿಯನ್ನು ಹಾಗೂ ಒಳನಾಡು ಜಲಸಾರಿಗೆ ನಿಯಮಗಳನ್ನು ರೂಪಿಸಲಾಗುವುದು. ಸಾಗರಮಾಲಾ ಯೋಜನೆಯಡಿ ಕಡಲ ತೀರದ ವ್ಯಾಪಾರಕ್ಕೆ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡುವ ಉದ್ದೇಶದಿಂದ ಅಂದಾಜು 1,017 ಕೋಟಿ ರೂ.ಗಳ ವೆಚ್ಚದಲ್ಲಿ ಒಟ್ಟು 26 ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಕರಾವಳಿ ತೀರ ಪ್ರದೇಶ ಹಾಗೂ ಬಂದರುಗಳ ಅಭಿವೃದ್ಧಿಯು ರಾಜ್ಯದ ಜಲಸಾರಿಗೆ ವಹಿವಾಟು ಹೆಚ್ಚಿಸಿ, ಉದ್ಯೋಗ ಸೃಷ್ಟಿಯ ಜೊತೆಗೆ, ರಾಜ್ಯದಲ್ಲಿ ಆರ್ಥಿಕ ಚಟುವಟಿಕೆಗಳನ್ನು ಉತ್ತೇಜಿಸುತ್ತದೆ. ಈ ನಿಟ್ಟಿನಲ್ಲಿ ವಿವಿಧ ಕ್ರಮಗಳನ್ನು ಕೈಗೊಳ್ಳಲು ನಮ್ಮ ಸರ್ಕಾರವು ಬದ್ಧವಾಗಿದೆ ಎಂದಿದ್ದಾರೆ.
ಕಾರವಾರ, ಹಳೆ ಮಂಗಳೂರು ಮತ್ತು ರಾಜ್ಯದ 11 ಕಿರು ಬಂದರುಗಳಲ್ಲಿ ಸುಗಮ ಸಂಚಾರಕ್ಕಾಗಿ ಹೂಳೆತ್ತುವ ಕಾಮಗಾರಿಗಳನ್ನು ಹಂತ ಹಂತವಾಗಿ ಕೈಗೆತ್ತಿಗೊಳ್ಳಲಾಗುತ್ತಿದೆ. ಉತ್ತರ ಕನ್ನಡ ಜಿಲ್ಲೆಯ ಮಂಕಿಯಲ್ಲಿ ವಿವಿಧೋದ್ದೇಶ ಬಂದರಿನ ಅಭಿವೃದ್ಧಿಗೆ ಕಾರ್ಯಸಾಧ್ಯತಾ ವರದಿಯನ್ನು ತಯಾರಿಸಲಾಗುತ್ತಿದೆ. ಹಳೇ ಮಂಗಳೂರು ಬಂದರಿನಲ್ಲಿ 350 ಮೀ. ಉದ್ದದ ಕೋಸ್ಟಲ್ ಬರ್ತ್ ನಿರ್ಮಾಣ ಕಾಮಗಾರಿಯನ್ನು 2024-25ನೇ ಸಾಲಿನಲ್ಲಿ ಪೂರ್ಣಗೊಳಿಸಲಾಗುವುದು ಎಂದು ಸಿಎಂ ಭರವಸೆ ನೀಡಿದ್ದಾರೆ.
ವಿಮಾನ ನಿಲ್ದಾಣ ಕಾಮಗಾರಿ
ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಾರುಕಟ್ಟೆಗಳೊಂದಿಗೆ ಸಂಪರ್ಕ ಸಾಧಿಸುವ ದೃಷ್ಟಿಯಿಂದ 1600 ಕೋಟಿ ರೂ. ವೆಚ್ಚದಲ್ಲಿ ವಿವಿಧ ವಿಮಾನ ನಿಲ್ದಾಣಗಳನ್ನು ಅಭಿವೃದ್ಧಿ ಪಡಿಸಲಾಗುತ್ತಿದೆ;
ಮೈಸೂರು ವಿಮಾನ ನಿಲ್ದಾಣದ ರನ್-ವೇ ವಿಸ್ತರಣೆಗೆ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಭೂಸ್ವಾಧೀನಕ್ಕೆ 126 ಕೋಟಿ ರೂ. ಬಿಡುಗಡೆ ಮಾಡಲಾಗಿದೆ ಹಾಗೂ ಪ್ರಸಕ್ತ ಸಾಲಿನಲ್ಲಿ ಬಾಕಿ 43 ಕೋಟಿ ರೂ. ಬಿಡುಗಡೆಗೊಳಿಸಿ, ಕಾಮಗಾರಿ ಪ್ರಾರಂಭಕ್ಕೆ ಕ್ರಮ ವಹಿಸಲಾಗುವುದು. ವಿಜಯಪುರದಲ್ಲಿ 350 ಕೋಟಿ ರೂ.ಗಳ ವೆಚ್ಚದಲ್ಲಿ ವಿಮಾನ ನಿಲ್ದಾಣ ಕಾಮಗಾರಿಯು ಮುಕ್ತಾಯ ಹಂತದಲ್ಲಿದ್ದು, ಶೀಘ್ರವೇ ಕಾರ್ಯಾಚರಣೆ ಪ್ರಾರಂಭವಾಗಲಿದೆ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಈ ಯೋಜನೆಗೆ 94 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದೆ ಎಂದು ತಿಳಿಸಿದ್ದಾರೆ.
ಹಾಸನ ವಿಮಾನ ನಿಲ್ದಾಣ ಕಾಮಗಾರಿಗೆ 2023-24ನೇ ಸಾಲಿನಲ್ಲಿ 55 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದ್ದು, ಪ್ರಸಕ್ತ ಸಾಲಿನಲ್ಲಿ ಬಾಕಿ ಇರುವ 30 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿ ಕಾಮಗಾರಿಯನ್ನು ಪೂರ್ಣಗೊಳಿಸಲಾಗುವುದು ಎಂದಿದ್ದಾರೆ.
220 ಕೋಟಿ ರೂ. ವೆಚ್ಚದ ರಾಯಚೂರು ವಿಮಾನ ನಿಲ್ದಾಣ ನಿರ್ಮಾಣಕ್ಕೆ ಅಗತ್ಯ ಅನುದಾನ ಒದಗಿಸಲಾಗುವುದು. ಕಾರವಾರ ನೌಕಾನೆಲೆಯ ವಿಮಾನ ನಿಲ್ದಾಣ ನಿರ್ಮಾಣ ಕಾಮಗಾರಿಯ ಭೂಸ್ವಾಧೀನ ಪ್ರಕ್ರಿಯೆಯ ತೊಡಕುಗಳನ್ನು ನಿವಾರಿಸಿ ಕಾಮಗಾರಿಗಳನ್ನು ಪ್ರಾರಂಭಿಸಲಾಗುವುದು ಎಂದು ಸಿಎಂ ಸಿದ್ಧರಾಮಯ್ಯ ಹೇಳಿದ್ದಾರೆ.


Click it and Unblock the Notifications